ಬೆಂಗಳೂರು, ಜನವರಿ 30: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾಗಿ ಜಾರಿಗೆ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್ ಅವರು, ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.