ಬೆಂಗಳೂರು : ಅಧಿಕಾರ ಹಂಚಿಕೆ ಸೂತ್ರದ ಪ್ರಕಾರ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಶತಸಿದ್ದ. ನವೆಂಬರ್ 15 ಅಥವಾ 16ರಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಶನಿವಾರ ಭೇಟಿ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಶೀಘ್ರವೇ ಸಿಎಂ ಬದಲಾಗುವುದು ಪಕ್ಕಾ ಎಂದು ಇದೇ ವೇಳೆ ಅವರು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ರಾಜ್ಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ ಸೇವಾ ಹಿರಿತನ ಹೆಚ್ಚಳ ಮಾಡಿದ್ದರು. ಆದರೆ ಇಂದು ಪೊಲೀಸರು ಇಲ್ಲಿನ ಟೆಂಟ್ ಕಿತ್ತು ಹಾಕಲು ಬಂದಿದ್ದರು. ಇಲ್ಲಿ ನೀವು ಟೆಂಟ್ ಕಿತ್ತರೆ ಸರ್ಕಾರದ ಟೆಂಟ್ ಕಿತ್ತು ಹಾಕ್ತಾರೆ ನೆನಪಿರಲಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.